ಪರಿಕ್ಷಾ ಕೇಂದ್ರಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಿಸಿ: ಜಿಲ್ಲಾಧಿಕಾರಿ ಸೂಚನೆ


ಹಾಸನ ಜೂ.10:- ಜೂನ್ 18 ರಂದು ದ್ವಿತೀಯ ಪಿ.ಯು.ಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದ್ದು, ಅದಕ್ಕೂ ಮುನ್ನ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಸ್ಥಳೀಯ ಆಡಳಿತದ ನೆರವಿನಿಂದ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಿಸಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
 ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಬಾಕಿ ಇರುವ ದ್ವಿತೀಯ ಪಿ.ಯು.ಸಿ ಇಂಗ್ಲೀಷ್ ಪರೀಕ್ಷೆ ನಡೆಸುವ ಕುರಿತಾಗಿ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು ಪರೀಕ್ಷೆಯು ಯಾವುದೇ ಗೊಂದಲವಿಲ್ಲದೆ ನಡೆಯಬೇಕು. ಕೋವಿಡ್-19 ನಿಯಂತ್ರಣಾ ಕ್ರಮಗಳ ಬಗ್ಗೆ ಮುಂಜಾಗ್ರತೆ ವಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಸಂಘಟಿಸಿ ಎಂದರು.
ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನ ಯಾವುದೇ ರೀತಿಯ ಸಾರಿಗೆ ಸಮಸ್ಯೆಯಾಗಬಾರದು. ಹಾಗಾಗಿ ಆ ದಿನ ಸಾರ್ವಜನಿಕ ಬಸ್ ಸಂಚಾರ ಸಂಪೂರ್ಣವಾಗಿರಲಿ ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಒಟ್ಟಾರೆಯಾಗಿ ಪರೀಕ್ಷೆಗೂ ಮುನ್ನ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ, ಶೀತ, ಜ್ವರ ಹಾಗೂ ಇತರೆ ರೊಗಲಕ್ಷಣಗಳಿದ್ದರೆ, ಅಂತಹ ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿ. ಇದರ ಜೊತೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಆರೋಗ್ಯ ಸಿಬ್ಬಂಧಿಗಳನ್ನು ನೇಮಿಸಿ ಎಂದರು.
ಜಿಲ್ಲೆಯಲ್ಲಿ ಒಟ್ಟು 30 ಪರೀಕ್ಷಾ ಕೇಂದ್ರಗಳಿದ್ದು, ಹೆಚ್ಚುವರಿಯಾಗಿ 15 ಬ್ಲಾಕ್‍ಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಹಾಗಾಗಿ ಪರೀಕ್ಷಾ ಸಂದರ್ಭದಲ್ಲಿ ಸಾಮಾಜಿಕ ಅಂತರಕ್ಕೆ ಯಾವುದೇ ರೀತಿಯ ಅಡಚಣೆ ಇರುವುದಿಲ್ಲ. ಜೊತೆಗೆ ಯಾವುದೇ ವಿದ್ಯಾರ್ಥಿಯಲ್ಲಿ ರೋಗಲಕ್ಷಣಗಳು ಕಂಡುಬಂದಲ್ಲಿ ಅಂತಹವರನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸುವುದರ ಜೊತೆಗೆ ಸ್ಥಳೀಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜಯಣ್ಣ ಅವರು ತಿಳಿಸಿದರು.
ಪ್ರಶ್ನೆ ಪತ್ರಿಕೆಗಳನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಕೊಂಡೊಯ್ಯಲು ವಾಹನ ವ್ಯವಸ್ಥೆ ಹಾಗೂ ಪೊಲೀಸ್ ಸಿಬ್ಬಂದಿ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಯವರಲ್ಲಿ ಜಯಣ್ಣ ಅವರು ಮನವಿ ಮಾಡಿದರು.
ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ ಅವರು ಮಾತನಾಡಿ ಕಂಟೈನ್‍ಮೆಂಟ್ ವಲಯಗಳಿಂದ ಬರುವ ವಿದ್ಯಾರ್ಥಿಗಳಿದ್ದರೆ, ಅವರ ಮಾಹಿತಿ ಪಡೆದು ಪರೀಕ್ಷೆಗೆ ಹಾಜರಾಗಲು ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
 ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಎನ್ ನಂದಿನಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಉಪವಿಭಾಗಾಧಿಕಾರಿ ಗಿರೀಶ್ ನಂದನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ ಜಗದೀಶ್ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. 

Post a Comment

Previous Post Next Post