ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಆರ್ ಗಿರೀಶ್


ಹಾಸನ.ಜೂ.15:- ಕೋವಿಡ್-19 ಕಾರಣದಿಂದಾಗಿ ಮಳೆಗಾಲದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುತ್ತಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಬರುವುದಕ್ಕೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
 ನಗರದ ಸಂತ ಜೋಸೆಫ್ ಶಾಲೆಯಲ್ಲಿ ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ನಡೆಸಲಾದ ಸಭೆಯಲ್ಲಿ ಮಾತನಾಡಿದ ಅವರು ಮಳೆಗಾಲದಲ್ಲಿ ಕೆಲವು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಬಹುದು ಅಥವಾ ಪರೀಕ್ಷಾ ಕೇಂದ್ರಗಳಲ್ಲಿ ನೀರು ಸೋರಿಕೆ, ಇರುಚಲು ಹಾಗೂ ಇತರೆ ಸಮಸ್ಯೆಗಳಿದ್ದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮುಖ್ಯ ಶಿಕ್ಷಕರು ಈಗಿನಿಂದಲೇ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಇದಕ್ಕೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರವಿದೆ ಎಂದರು.
 ಪ್ರಸ್ತುತ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸಿಂಗ್, ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡುವುದು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸುವುದು, ಯಾವುದೇ ರೀತಿಯ ರೋಗಲಕ್ಷಣಗಳಿರುವ ವಿದ್ಯಾರ್ಥಿಯನ್ನು ಗೊಂದಲಕ್ಕೆ ಆಸ್ಪದ ನೀಡದಂತೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಸಲು ವ್ಯವಸ್ಥೆ ಮಾಡುವುದು ಹಾಗೂ ಇತ್ಯಾದಿ ಅಗತ್ಯ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಈ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಇತರೆ ಸ್ವಯಂ ಸೇವಕರು ಕೈಜೋಡಿಸುವರು ಎಂದು ಜಿಲ್ಲಾಧಿಕಾರಿ ತಿಳಿಸಿದರು.
 ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದಲ್ಲಿ ಯಾವುದೇ ರೀತಿಯ ಜೆರಾಕ್ಸ್ ಅಂಗಡಿಗಳು ಹಾಗೂ ಸಾರ್ವಜನಿಕರ ಓಡಾಟವನ್ನು ನಿಯಂತ್ರಿಸುವ ಸಲುವಾಗಿ ಸೆಕ್ಷನ್ 144 ಜಾರಿಗೊಳಿಸಲಾಗುವುದು. ಅಲ್ಲದೇ ಮುಖ್ಯವಾಗಿ ಕೊರೋನಾ ಹಿನ್ನೆಲೆಯಲ್ಲಿ ಸಾರಿಗೆಗಳು ಸಂಪೂರ್ಣವಾಗಿ ಸಂಚರಿಸುತ್ತಿಲ್ಲವಾದ್ದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿ ಬಸ್‍ಗಳ ವ್ಯವಸ್ಥೆ ಮಾಡಲಾಗುವುದು. ಹಾಗಾಗಿ ಆಯಾ ಶಾಲೆಗಳ ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಪ್ರಯಾಣದ ವಿವರವನ್ನು ಕೆ.ಎಸ್.ಆರ್.ಟಿ.ಸಿ ಗೆ ನೀಡಬೇಕು. ಯಾವುದೇ ವಿದ್ಯಾರ್ಥಿಯು ಸಾರಿಗೆ ಸಮಸ್ಯೆಯಿಂದ ಪರೀಕ್ಷೆಗೆ ಗೈರು ಹಾಜರಾಗದಂತೆ ಎಚ್ಚರವಹಿಸಬೇಕು ಎಂದರು.
 ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ಅವರು ಮಾತನಾಡಿ ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆಗೆ ಹೆಚ್ಚು ಆಧ್ಯತೆ ನೀಡಿ ಪರೀಕ್ಷೆಗೂ ಮುನ್ನ ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು. ಅಲ್ಲದೇ ಪರೀಕ್ಷಾ ಕೇಂದ್ರಗಳಿಗೆ ಯಾವುದೇ ಅವಶ್ಯಕತೆಗಳು ಅಥವಾ ಕೊರತೆಗಳಿದ್ದಲ್ಲಿ ಎಸ್.ಡಿ.ಎಮ್ ಅನುದಾನವನ್ನು ಬಳಸಿಕೊಳ್ಳಿ ಎಂದು ಹೇಳಿದರು.
 ಉಪ ಪೊಲೀಸ್ ಅಧೀಕ್ಷಕರಾದ ಪುಟ್ಟಸ್ವಾಮಿ ಗೌಡ ಅವರು ಮಾತನಾಡಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲಾಗುತ್ತಿದ್ದು, ಶಿಕ್ಷಕರು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದರು.
 ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪ್ರಕಾಶ್, ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ರಾಜ ಶೆಟ್ಟಿ ಹಾಗೂ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Post a Comment

Previous Post Next Post