ಠ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಪತ್ತೆಯಾಗುವ ಕೋವಿಡ್-19 ಪ್ರಕರಣಗಳ 10 ಪಟ್ಟು ಹೆಚ್ಚು ಮಾಡಬೇಕು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಇಂದು ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಪ್ರಧಾನ ಮಂತ್ರಗಳು 10 ರಾಜ್ಯದ ಮುಖ್ಯಮಂತ್ರಿಗಳೊಡನೆ ಸಭೆ ನಡೆಸಿ ಕೋವಿಡ್ ಮಾದರಿಗಳ ಪರೀಕ್ಷೆ ಹೆಚ್ಚು ಮಾಡುವುದು, ಸಾವಿನ ಸಂಖ್ಯೆಗಳನ್ನು ಕಡಿಮೆ ಮಾಡುವುದು ಹಾಗೂ ಸೋಂಕಿತರ ಸಂಪರ್ಕಿತರನ್ನು 70 ಗಂಟೆಗಳ ಒಳಗೆ ಪತ್ತೆ ಮಾಡುವಂತೆ ಸೂಚಿಸಿದ್ದಾರೆ ಎಂದು ಹೇಳಿದರು.
ಅಲ್ಲದೆ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರು ತಿಳಿಸಿದ್ದು, ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ದೂರು ದಾಖಲಿಸಿ ದಂಡ ವಿಧಿಸಿ ಎಂದು ಅವರು ಸೂಚಿಸಿದರು.
ಈ ಹಿಂದೆ 60,000 ಮಾದರಿಗಳನ್ನು ಪರೀಕ್ಷೆ ಮಾಡಲು ಸೂಚಿಸಲಾಗಿತ್ತು. ಆದರೆ ಕೋವಿಡ್-19 ವ್ಯಾಪಕವಾಗಿ ಹೆಚ್ಚುತ್ತಿರುವುದರಿಂದ ಕನಿಷ್ಟ 75,000 ಮಾದರಿಗಳ ಪರೀಕ್ಷೆ ಮಾಡಲು ಗುರಿ ನೀಡಲಾಗಿದೆ ಎಂದರು.
ಜಿಲ್ಲೆಗಳಲ್ಲಿ ಆರ್.ಎ.ಟಿ ಕಿಟ್‍ಗಳು ಇಲ್ಲದಿದ್ದರೆ ಆರ್.ಟಿ.ಪಿ.ಸಿ.ಆರ್ ಮಾಡಬೇಕು. ಒಟ್ಟಿನಲ್ಲಿ ಯಾವುದೇ ಕಾರಣಕ್ಕು ಗುರಿಯನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದರು.
ಮಾದರಿಗಳ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅನಿಯಮಿತವಾಗಿ ಪರೀಕ್ಷೆಗಳನ್ನು ಮಾಡಬಾರದು. ಸೋಂಕಿತರ ಸಂಪರ್ಕಿತರು ಹಾಗೂ ಕಂಟೈನ್ಮೆಂಟ್ ವಲಯಗಳಲ್ಲಿ ಹೆಚ್ಚು ಮಾದರಿಗಳ ಪರೀಕ್ಷೆ ಮಾಡಬೇಕು ಎಂದು ಅಭಿವೃದ್ಧಿ ಆಯುಕ್ತರಾದ ವಂದಿಯ ಶರ್ಮ ತಿಳಿಸಿದರು.
ಸೋಂಕಿತರ ಸಂಪರ್ಕಿತರನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಪತ್ತೆಹಚ್ಚಬೇಕಾಗಿದೆ. ಇಲ್ಲವಾದರೆ ಸೋಂಕು ಹರಡುವುದನ್ನು ನಿಯಂತ್ರಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್-19 ಸಾವಿನ ಸಂಖ್ಯೆ ಹೆಚ್ಚಾಗುತ್ತಿರಲು ಕಾರಣ ಇತರೆ ರೋಗಗಳಿಂದ ಬಳಲುತ್ತಿರುವ ಸೋಂಕಿತರು. ಈ ನಿಟ್ಟಿನಲ್ಲಿ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಆಶಾ ಕಾರ್ಯಕರ್ತೆಯರಿಗೆ ಪಲ್ಸ್ ಆಕ್ಸಿಮೀಟರ್ ಗಳನ್ನು ನೀಡಿ ಆಮ್ಲಜನಕದ ಮಟ್ಟ ಕಡಿಮೆ ಇರುವವರನ್ನು ಕೂಡಲೇ ಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ ಜಗದೀಶ್ ಹಾಗೂ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.
Tags
ಹಾಸನ