ಹಾಸನ: ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ನ್ಯಾಯಯುತ ಬೇಡಿಕೆಗಳ್ನು ಈಡೇರಿಸದಿದ್ದರೇ ಬೀದಿಗಿಳಿದು ಹೋರಾಟ ಮಾಡುವುದಾಗಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ರಾಥೋಡ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಕಛೇರಿ ಸಿಬ್ಬಂದಿಗಳು ಹಲವಾರು ವರ್ಷಗಳಿಂದ ಬೇಡಿಕೆಗಳನ್ನು ಇಟ್ಟಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಮತ್ತು ಇತರೆ ಬೇಡಿಕೆಗಳನನ್ನು ಈಡೇರಿಸುವಂತೆ ಮನವಿ ಮಾಡಲಾಗಿತ್ತು ಎಂದರು. ಈ ನಿಟ್ಟಿನಲ್ಲಿ ಕಳೆದ 5 ದಿವಸಗಳಿಂದಲೂ ಕೆಲಸಕ್ಕೆ ಹಾಜರಾಗದೇ ಮುಷ್ಕರದಲ್ಲಿ ಪಾಲ್ಗೊಂಡಿದ್ದೇವೆ. ಇದುವರೆಗೂ ಸ್ಪಂದಿಸದೇ ಇರುವುದರಿಂದ ಸಾರ್ವಜನಿಕರು ಆರೋಗ್ಯ ಸೇವೆಯಿಂದ ವಂಚಿತರಾಗಿದ್ದಾರೆ. ಕೊರೋನಾ ವೇಳೆಯಲ್ಲಿ ಬಿಡುವಿಲ್ಲದೇ ಕೆಲಸ ಮಾಡಿದರೂ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಜಿಲ್ಲೆಯಲ್ಲಿ 1500 ಮತ್ತು Áಜ್ಯದಲ್ಲಿ 30 ಸಾವಿರ ಜನ ಕಾರ್ಮಿಕರು ಇದ್ದೇವೆ. ಕೆಲಸದಿಂದ ವಜಾ ಮಾಡುವುದಾಗಿ ನಮ್ಮ ಹೋರಾಟಕ್ಕೆ ಅಧಿಕಾರಿಗಳು ಎಚ್ಚರಿಸಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಸಚಿವರು ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಂಘಟಕರಾದ ಷಣ್ಮುಖ, ಸಂತೋಷ್, ಯಶವಂತ್ ಇತರರು ಪಾಲ್ಗೊಂಡಿದ್ದರು.