ಕಾಲು ಬಾಯಿ ಜ್ವರಕ್ಕೆ ಲಸಿಕೆ ಹಾಕುವಲ್ಲಿ ಮುಂಜಾಗ್ರತೆ ವಹಿಸಿ: ಆರ್. ಗಿರೀಶ್

ಹಾಸನ,ಸೆ.29:- ಜಿಲ್ಲೆಯಲ್ಲಿ ಅ.2 ರಂದು ನಡೆಯುವ ಕಾಲು ಮತ್ತು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಜಾನುವಾರು ಬಿಟ್ಟು ಹೋಗದಂತೆ ಮುಂಜಾಗ್ರತೆ ವಹಿಸುವಂತೆ  ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  



ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ಪೂರ್ವ ಭಾವಿ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿರುವ 6,56,156 ಜಾನುವಾರುಗಳಿದ್ದು, ಅವುಗಳ ಮಾಲೀಕರಿಗೆ ಕಾಲು ಮತ್ತು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ ಸ್ವರೂಪದ ಬಗ್ಗೆ ವ್ಯಾಪಕ ಅರಿವು ಮೂಡಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು.

ಅಕ್ಟೊಬರ್ 2 ರಿಂದ ನವೆಂಬರ್ 15 ರವರೆಗೆ ನಡೆಯಲಿರುವ 45 ದಿನಗಳ 17ನೇ ಸುತ್ತಿನ ಸಾಮೂಹಿಕ ಕಾಲು ಮತ್ತು ಬಾಯಿ ಜ್ವರ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸಲು ಪಶು ವೈದ್ಯರನ್ನೊಳಗೊಂಡ ವ್ಯವಸ್ಥಿತ ತಂಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಚಿಸುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮ ಪಂಚಾಯಿತಿ ಕಚೇರಿಗಳ, ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಪಶು ಆರೋಗ್ಯ ಕೇಂದ್ರಗಳು ಸೇರಿದಂತೆ ಹಲವು ಕಡೆಗಳಲ್ಲ್ಲಿ ಪೋಸ್ಟರ್ ಹಾಗೂ ಬ್ಯಾನರ್‍ಗಳನ್ನು ಅಳವಡಿಸಿ, ಕರಪತ್ರಗಳನ್ನು ಹಂಚುವ ಮೂಲಕವೂ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿಯವರು ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕಾಲು ಮತ್ತು ಬಾಯಿ ಜ್ವರದ ಕುರಿತು ಸ್ಥಳೀಯ ಕೇಬಲ್ ವಾಹಿನಿಗಳು ಹಾಗೂ ಆಕಾಶವಾಣಿಗಳ ಮೂಲಕ ಮೂಲಕ ರೈತ ಬಾಂಧವರಿಗೆ ಮಾಹಿತಿ ನೀಡಿ ಅರಿವು ಮೂಡಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

45 ದಿನಗಳ ಲಸಿಕಾ ಕಾರ್ಯಕ್ಕೆ ಸಹಾಯವಾಗುವಂತೆ ಪಶು ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವಂತೆ ಹಾಗೂ ಹಾಸನ ಹಾಲು ಒಕ್ಕೂಟದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ಒದಗಿಸುವಂತೆ ಆರ್. ಗಿರೀಶ್ ಅವರು ತಿಳಿಸಿದರು.

ಕಾಲು ಬಾಯಿ ಜ್ವರದ ಲಸಿಕೆಗಳನ್ನು ಕೋಲ್ಡ್ ಸ್ಟೋರೇಜ್‍ನಲ್ಲಿ ಇರಿಸಿ ವಿತರಿಸಬೇಕು ಇದಕ್ಕೆ ನಿರಂತರವಾಗಿ ಅವಶ್ಯಕ ವಿದ್ಯತ್ ಸರಬರಾಜು ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.  

ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಲಸಿಕೆ ನೀಡುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಪಶು ವೈದ್ಯಕೀಯ ಸಿಬ್ಬಂದಿಗಳು ಹಾಗೂ ಜಾನುವಾರುಗಳ ಮಾಲೀಕರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸುವಂತೆ ಹಾಗೂ ಸಾರ್ವಜನಿಕರಲ್ಲಿಯೂ ಈ ಬಗ್ಗೆ ಅರಿವು ಮೂಡಿಸುವಂತೆ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರು ಮಾತನಾಡಿ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿ ಹಳ್ಳಿಗಳಿಗೂ ಮಾಹಿತಿ ನೀಡಿ ಅರಿವು ಮೂಡಿಸುವಂತೆ ಗ್ರಾಮ ಪಂಚಾಯ್ತಿ ಅಭಿವೃದ್ಧಿಅಧಿಕಾರಿಗಳು ಹಾಗೂ ಕಾರ್ಯದರ್ಶಿಯವರಿಗೆ ಸೂಚನೆ ನೀಡಲಾಗುವುದು ಎಂದರು.

ಇದೊಂದು ಪ್ರಮುಖ ಕಾರ್ಯಕ್ರಮವಾಗಿದ್ದು, ರೈತಾಪಿ ವರ್ಗಕ್ಕೆ ಪೂರಕವಾಗಿರುವ ಹೈನುಗಾರಿಕೆ ವೃದ್ಧಿಗೆ ಸಹಕಾರಿಯಾಗಿದೆ. ಹಾಗಾಗಿ ಪಶು ವೈದ್ಯಕೀಯ ಇಲಾಖೆ ಮೂಲಕ ಲಸಿಕಾ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವಂತೆ ಅವರು ತಿಳಿಸಿದರು.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಉಪ ನಿರ್ದೇಶಕರಾದ ಡಾ|| ಕೆ.ಆರ್. ರಮೇಶ್, ಜಿಲ್ಲಾ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಡಾ|| ಸುಂದರೇಶ್, ಪಶು ವೈದ್ಯಕೀಯ ಕಾಲೇಜಿನ ಮುಖ್ಯಸ್ಥರಾದ ಡಾ|| ಶಿವಕುಮಾರ್, ಪಶು ವೈದ್ಯಕೀಯ ಕಾಲೇಜಿನ ಮೈಕ್ರೋ ಬೊಯಾಲಾಜಿಸ್ಟ್ ಡಾ|| ರವೀಂದ್ರ ಹೆಗ್ಡೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಸಹಾಯಕ ನಿರ್ದೇಶಕರಾದ ಡಾ|| ಜಾನಕಿ, ಡಾ|| ವೆಂಕಟೇಶ್, ಮತ್ತಿತರ ಅಧಿಕಾರಿಗಳು ಹಾಜರಿದ್ದರು.


Post a Comment

Previous Post Next Post