ಕಮಿಷನ್ ವ್ಯವಹಾರದಲ್ಲಿ ಮುಳುಗಿದ ರಾಜ್ಯ ಸರ್ಕಾರ: ಶಾಸಕ ಎಚ್.ಡಿ.ರೇವಣ್ಣ ಟೀಕೆ

 ಬೇಲೂರು: ‘ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಹೇಳಿದರು.


ಪಟ್ಟಣದ ಹೊರವಲಯದಲ್ಲಿರುವ ವಿಆರ್‌ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ತಾಲ್ಲೂಕು ಆಯೋಜಿಸಿದ್ದ ಪುರಸಭೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಮತದಾರರಲ್ಲಿ ಮತ ಕೇಳುವ ನೈತಿಕ ಹಕ್ಕಿಲ್ಲ ಈ ಎರಡು ಪಕ್ಷಗಳು ಜನರ ವಿಶ್ವಾಸವನ್ನು ಕಳೆದುಕೊಂಡಿವೆ’ ಎಂದರು.



‘ನಾನು ಈ ಹಿಂದೆ ಇಂಧನ ಸಚಿವನಾಗಿದ್ದಾಗ ವಿದ್ಯುತ್ ದರವನ್ನು ಒಂದು ಪೈಸೆ ಬೆಲೆ ಏರಿಕೆ ಮಾಡಿರಲಿಲ್ಲ. ಆದರೆ, ಬಿಜೆಪಿ ಸರ್ಕಾರ ಪದೇ ಪದೇ ಬೆಲೆ ಏರಿಕೆ ಮಾಡುತ್ತಿದೆ. ರಾಜ್ಯ ಸರ್ಕಾರ ಪ್ರತಿ ಇಲಾಖೆಯಲ್ಲೂ ಕಮಿಷನ್ ವ್ಯವಹಾರ ಮಾಡುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ನಾನು ಹೆಚ್ಚು ಕಾಳಜಿ ವಹಿಸುವುದನ್ನು ಸಹಿಸದೆ ನನ್ನನ್ನು ಸೂಪರ್ ಸಿಎಂ ಎಂದು ಬಿಂಬಿಸಿದ್ದರು’ ಎಂದರು.

‘ಬೇಲೂರು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಪ್ರಬಲವಾಗಿದೆ. ಇಲ್ಲಿ ಪಕ್ಷದ ನಿಷ್ಠಾವಂತರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು. ಅವರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು’ ಎಂದರು.

ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ‘ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಾಡಿದ್ದ ಕೆಲಸಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡಲಿಲ್ಲ. ಆದರೆ, ಪಕ್ಷದ ಕಾರ್ಯಕರ್ತರು ನಮ್ಮ ಸರ್ಕಾರದ ಸಾಧನೆಗಳನ್ನು ಮನೆ ಮನೆಗೂ ತಲುಪಿಸುವ ಕೆಲಸ ಮಾಡಬೇಕು. ಈ ಬಾರಿಯ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ತೋಚ ಅನಂತಸುಬ್ಬರಾಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್ ಮಾತನಾಡಿದರು.

ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಬಿ.ಸಿ.ಮಂಜುನಾಥ್, ಕಾರ್ಯದರ್ಶಿ ಸಿ.ಎಚ್. ಮಹೇಶ್, ತಾಪಂ ಅಧ್ಯಕ್ಷೆ ಸುಮಾಪರಮೇಶ್, ಉಪಾಧ್ಯಕ್ಷೆ ಜಮುನಾ ಅಣ್ಣಪ್ಪ, ಮುಖಂಡರಾದ ಜಿ.ಟಿ. ಇಂದಿರಾ, ನಟರಾಜ್, ಎಂ.ಕೆ.ಆರ್. ನಾಗೇಶ್, ಮಹದೇವ್, ಭಾರತಿ ಅರುಣ್‌ಕುಮಾರ್ ಇತರರು ಇದ್ದರು.

Post a Comment

Previous Post Next Post