ಬೇಲೂರು ; ರಾಜ್ಯದಲ್ಲಿ ದಲಿತರ ಮೇಲೆ ನಡೆಯುತಿದ್ದ ದೌರ್ಜನ್ಯ ದಬ್ಬಾಳಿಕೆಗಳನ್ನು ತಡೆಗಟ್ಟಲು 70 ರ ದಶಕದಲ್ಲಿ ದಲಿತ ಸಂಘರ್ಷ ಸಮಿತಿ ಹುಟ್ಟು ಹಾಕಿ, ದಲಿತರ ಬದುಕಿನಲ್ಲಿ ಆಶಾಕಿರಣ ಮೂಡಿಸಿದವರೆ ಪ್ರೋ.ಬಿ.ಕೃಷ್ಣಪ್ಪರವರು ಎಂದು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಜಿಲ್ಲಾ ಪ್ರಧಾನ ಸಂಚಾಲಕ ಬಿ.ಎಲ್.ಲಕ್ಷ್ಮಣ್ ಹೇಳಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ತಾಲೂಕು ಘಟಕದಿಂದ ಬೇಲೂರು ಪಟ್ಟಣದ ಡಾ.ಅಂಬೇಡ್ಕರ್ ನಗರದಲ್ಲಿ ದಸಂಸ ಸಂಸ್ಥಾಪಕ ಪ್ರೋ.ಬಿ.ಕೃಷ್ಣಪ್ಪ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರೋ.ಬಿ.ಕೃಷ್ಣಪ್ಪರವರು ಡಾ.ಬಿ.ಆರ್.ಅಂಬೇಡ್ಕರ್‍ರವರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಬದುಕು ನಡೆಸಿದವರು. 70ರ ದಶಕದಲ್ಲಿ ರಾಜ್ಯದಲ್ಲಿ ದಲಿತ ಸಂಘರ್ಷ ಸಮಿತಿ ಸ್ಥಾಪಿಸಿ ಜೀವನದುದ್ದಕ್ಕೂ ಹೊರಾಟದ ಮೂಲಕವೇ ದಲಿತರಲ್ಲಿ ಸ್ವಾಭಿಮಾನದ ಕಿಚ್ಚನ್ನು ತುಂಬಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದುವರಿದಾಗ ಮಾತ್ರ ದೌರ್ಜನ್ಯ ದಬ್ಬಾಳಿಕೆಗಳನ್ನು ತಡೆಗಟ್ಟಲು ಸಾಧ್ಯ ಎಂಬುದನ್ನು ತೋರಿಸಿ ಕೊಟ್ಟು ದಲಿತ ಸಮುದಾಯಕ್ಕೆ ಬೇಳಕು ನೀಡಿದವರು. ಅವರು ಹೇಳಿದಂತೆ ದಲಿತರ ಗುಡಿಸಲುಗಳಲ್ಲಿ ಜ್ಞಾನದ ಜ್ಯೋತಿಯನ್ನು ಹಚ್ಚಿದ್ದೇನೆ ಅದು ಆರದಂತೆ ನೋಡಿಕೊಳ್ಳಿ ಎಂಬ ಮಾತು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರು ಪ್ರೋ.ಬಿ.ಕೃಷ್ಣಪ್ಪರವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಜೀವನ ಸಾರ್ಥಕ ಪಡಿಸಿ ಕೊಳ್ಳಬೇಕು ಎಂದರು.
ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಎಂ.ಕೆ.ಆರ್.ಸೋಮೇಶ್ ಮಾತನಾಡಿ, ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡುವ ಮೂಲಕ ಅವರಲ್ಲಿ ಜಾಗೃತಿ ಮೂಡಿಸಿ ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರೋ.ಬಿ.ಕೃಷ್ಣಪ್ಪರವರ ಪಾತ್ರ ಮಹತ್ತರವಾಗಿದ್ದು, ಅವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಿದೆ ಎಂದರು.
