ಹಾಸನ ಜೂ.೧೬:-ಯಗಚಿ ಜಲಾಶಯ ಯೋಜನೆಯಲ್ಲಿ ಬಾಕಿ ಇರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಳ್ಳಲಾಗಿರುವ ಭೂಮಿಗೆ ಪರಿಹಾರ ವಿತರಣೆಯನ್ನು ಶೀಘ್ರವಾಗಿ ಮಾಡುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಭೂಸ್ವಾಧೀನ ಹಂತದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಪ್ರಕ್ರಿಯೆಯು ಬಾಕಿ ಉಳಿದಿರುವ ಭೂಮಾಲೀಕರಿಗೆ ಪರಿಹಾರ ಹಣ ನೀಡಿ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಶಿತಪೀಡಿತ ಪ್ರದೇಶಗಳ ದುಸ್ಥಿತಿಯಲ್ಲಿರುವ ಮನೆಗಳ ನಿವಾಸಿಗಳಿಗೆ ಪುನರ್ವಸತಿಗೆ ಗಮನಹರಿಸುವುದರ ಜೊತೆಗೆ ಶೀಘ್ರವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಭೂ ಸ್ವಾಧೀನಕ್ಕೆ ಒಳಪಟ್ಟಿರುವ ಆಯಾ ವ್ಯಾಪ್ತಿಯಲ್ಲಿ ಯೋಜನೆ ಪ್ರದೇಶಗಳ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಭೂಮಾಲೀಕರೊಂದಿಗೆ ಸಮನ್ವಯ ಸಾಧಿಸಲು ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರ ನೆರವು ಪಡೆಯುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ವಿಶೇಷ ಭೂ ಸ್ವಾಧೀನ ಅಧಿಕಾರಿ ಮಂಜುನಾಥ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.