ಮೂರನೇ ಅಲೆಗೆ ಅಗತ್ಯ ಸಿದ್ಧತೆಗಳ ಬಗ್ಗೆ ಹೆಚ್ಚಿನ ಗಮನಹರಿಸಿ : ಜಿಲ್ಲಾಧಿಕಾರಿ

 ಹಾಸನ ಜೂ.೨೪:- ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಅಗತ್ಯ ಸಿದ್ಧತೆಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 


ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಕೋವಿಡ್ ೧೯ ಕುರಿತು ಎಲ್ಲಾ ತಹಶೀಲ್ದಾರ್ ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಕಡಿಮೆಯಾಗುತ್ತಿಲ್ಲ ಆದರಿಂದ ಹೋಂ ಐಸೋಲೇಶನ್ ಸಂಖ್ಯೆ ಹೆಚ್ಚಿಸಬೇಕು ಅಥವಾ ಕೋವಿಡ್ ಕೇರ್ ಸೆಂಟರ್ ಗಳಿಗೆ ಕರೆತಂದು ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಅವರು ಹೇಳಿದರು.

೨೦ ಕ್ಕಿಂತ ಅಧಿಕವಿರುವ ಸೋಂಕು ಇರುವ ಗ್ರಾಮಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕು ಅಷ್ಟೇ ಅಲ್ಲದೆ ಈ ಹಿಂದೆ ಪಾಸಿಟಿವ್ ಬಂದಿರುವವರನ್ನು  ಹೋಂ ಐಸೋಲೇಶನ್ ನಲ್ಲಿರಿಸಬೇಕು ಜೊತೆಗೆ ಪಾಸಿಟಿವ್ ಬಂದಿರುವ ಕುಟುಂಬದವರನ್ನೂ ರ‍್ಯಾಟ್  ಪರೀಕ್ಷೆಗೊಳಪಡಿಸಬೇಕು ನಂತರ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಒಳಪಡಿಸಿ ಪಾಸಿಟಿವ್ ಬಂದವರನ್ನು  ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಬೇಕು  ಎಂದರು.  

ಸೋಂಕು ಹೆಚ್ಚಿರುವ ಗ್ರಾಮಗಳಲ್ಲಿ ಶುಚಿತ್ವ ಮತ್ತು ಮಾಸ್ಕ್, ಸ್ಯಾನಿಟೈಸರ್ ಜೊತೆಗೆ  ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ  ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.  

ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಗುರಿಯನ್ನು ಹೆಚ್ಚಿಸುವುದರ ಜೊತೆಗೆ ಲಸಿಕೆ ತೆಗೆದುಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರಲ್ಲದೆ  ೧೮ ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆಯನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು. 

ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ೩ನೇ ಸುತ್ತಿನ ತಪಾಸಣೆಯನ್ನು  ಮುಂದಿನ ದಿನಗಳಲ್ಲಿ ಪೂರ್ಣಗೊಳಿಸವಂತೆ ಆದೇಶಿಸಿದರಲ್ಲದೆ ಲಾಕ್‌ಡೌನ್ ಸಡಿಲಿಕೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸದೆ  ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅನಾವಶ್ಯಕವಾಗಿ ಓಡಾಡುತ್ತಿರುವುದು ಕಂಡುಬರುತ್ತಿದ್ದು ಕಸ ಸಂಗ್ರಹಣೆ ವಾಹನಗಳಲ್ಲಿ ಧ್ವನಿವರ್ದಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದರು. 

ಶಾಸಕರಾದ ಹೆಚ್.ಡಿ ರೇವಣ್ಣ ಅವರು ವಿಡಿಯೋ ಸಂವಾದದ ಮೂಲಕ ಮಾತನಾಡಿ ಹೊಳೆನರಸೀಪುರದ ತಾಲ್ಲೂಕು ಮಕ್ಕಳ ಆಸ್ಪತ್ರೆಗಳಲ್ಲಿ ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು ಅದಕ್ಕೆ ಬೇಕಾಗುವ ತಾಂತ್ರಿಕತೆಗಳ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಸಿದರು.   

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ ಪರಮೇಶ ಅವರು ಮಾತನಾಡಿ ಕೋವಿಡ್ ನಿಯಂತ್ರಣಕ್ಕೆ  ಆಶಾ ಕಾರ್ಯಕರ್ತೆಯರ ಜೊತೆಯಲ್ಲಿ  ಗ್ರಾಮೀಣ ಭಾಗದ  ಸ್ವ ಸಹಾಯ ಸಂಘಗಳ ಸಹಕಾರ ಪಡೆದುಕೊಳ್ಳುವಂತೆ ಸೂಚಿಸಿದರು. 

ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ ಅವರು ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ಹೋಂ ಐಸೋಲೇಶನ್‌ಗಳಿಗೆ ಅಧಿಕಾರಿಗಳು ಭೇಟಿ ನೀಡಿ ಸಲಹೆ ಸೂಚನೆಗಳನ್ನು ನೀಡಬೇಕು ಎಂದರು. 

ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಬಿ.ಎ ಜಗದೀಶ್, ಗಿರೀಶ್ ನಂದನ್, ಜಿಲ್ಲಾ ಶಸ್ತç ಚಿಕಿತ್ಸಕರಾದ  ಡಾ|| ಕೃಷ್ಣಮೂರ್ತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಆರ್.ಸಿ ಎಚ್ ಅಧಿಕಾರಿ ಡಾ|| ಕಾಂತರಾಜು ಮಕ್ಕಳ ತಜ್ಞರಾದ ಡಾ|| ಮನುಪ್ರಕಾಶ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು. 


Post a Comment

Previous Post Next Post