ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ದಿಢೀರ್ ರಾಜ್ಯಪಾಲರ ಬದಲಾವಣೆ ಮಾಡಲಾಗಿದ್ದು, ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚೆಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯಪಾಲ ವಜುಭಾಯಿ ವಾಲಾ ಅವರ ಅಧಿಕಾರಾವಧಿ ಮುಗಿದಿರುವ ಹಿನ್ನೆಲೆಯಲ್ಲಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಹಲವು ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆ ಹಾಗೂ ಕೇಂದ್ರ ಸಂಪುಟ ಪುನಾರಚನೆಗೆ ನಿರ್ಧಾರ ಮಾಡಿರುವ ಪ್ರಧಾನಿ ಮೋದಿ ಹಿರಿಯ ಸಚಿವರಿಗೆ ಕೊಕ್ ನೀಡಿ ವಿವಿಧ ರಾಜ್ಯಗಳಿಗೆ ರಾಜ್ಯಪಾಲರನ್ನಾಗಿ ನೇಮಕ ಮಾಡುವ ಮೂಲಕ, ಸಂಪುಟದಲ್ಲಿ ಹೊಸ ಮುಖಗಳಿಗೆ ಸ್ಥಾನ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
