ಆಲೂರು : ಸರ್ಕಾರದ ಅನುದಾನಗಳನ್ನು ಸಮರ್ಪಕವಾದ ರೀತಿಯಲ್ಲಿ ಬಳಕೆ ಮಾಡುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜು ತಿಳಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಅಭಿವೃದ್ಧಿಯ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳಿಂದ ಮಾಹಿತಿ ಪಡೆದ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕೆಲಸಗಳ ಹಿನ್ನಡೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇಲಾಖಾವಾರು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆಯುವ ಸಮಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಒಬ್ಬರ ವಿರುದ್ಧ ಮತ್ತೊಬ್ಬರು ಪರಸ್ಪರ ಹೊಂದಾಣಿಕೆ ಇಲ್ಲದೆ ಮುಜುಗರ ಉಂಟು ಮಾಡಿದ ಪ್ರಸಂಗ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾತನಾಡಿ, ನಾನು ಇದೇ ತಾಲೂಕಿನವನು, ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಬೇಕೆಂಬ ಅಭಿಲಾಷೆ ಹೊಂದಿದ್ದೇನೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳಲ್ಲಿ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಉತ್ತಮ ಕೆಲಸ ನಿರ್ವಹಿಸುವಂತೆ ತಿಳಿಸಿದ ಅವರು ಸರ್ಕಾರದ ಅನುದಾನಗಳನ್ನು ಸಮರ್ಪಕವಾಗಿ ಬಳಸಿ ತಾಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಂತೆ ತಿಳಿಸಿದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಪ ಕಾರ್ಯದರ್ಶಿ ನಾಗರಾಜು, ಆಡಳಿತ ಕಾರ್ಯದರ್ಶಿ ಚಂದ್ರಶೇಖರ್, ಅಭಿವೃದ್ಧಿ ಕಾರ್ಯದರ್ಶಿ ಪುನೀತ್, ಯೋಜನಾ ಅಧಿಕಾರಿ ವಿಠಲ್ ಕಾವಳೆ, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನಾರಾಯಣ ಸ್ವಾಮಿ ಸೇರಿದಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.
Tags
ಆಲೂರು