ಚನ್ನರಾಯಪಟ್ಟಣ: ತಾಲೂಕಿನಲ್ಲಿ ಕಾಂಗ್ರೆಸ್ ಸದಸ್ಯತ್ವ ನೊಂದಣಿ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ನಿರೀಕ್ಷೆ ಮೀರಿ ಜನತೆ ಅಭಿಯಾನದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಚನ್ನರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಎಂ ರಾಮಚಂದ್ರು ತಿಳಿಸಿದರು.
ಜತ್ತೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಜನತೆ ಬೇರೆ ಪಕ್ಷಗಳ ನಡತೆಯನ್ನು ನೋಡಿ ಬೇಸತ್ತು ಹೋಗಿದ್ದಾರೆ. ಯುವಕರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಹಿಂದಿನಿಂದಲೂ ಉದ್ಯೋಗಕ್ಕೆ ಹೆಚ್ಚು ಒತ್ತು ನೀಡುತ್ತ ಬರುತ್ತಿದೆ. ಮುಂದಿನ ದಿನಗಳಲ್ಲಿ ನಿರುದ್ಯೋಗ ನಿವಾರಣೆಗೆ ಶ್ರಮಿಸುತ್ತದೆ.
ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಲಿದ್ದಾರೆ. ಯಾವುದೇ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆಯು ಎದುರಾದರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ನೂರಾರು ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಲಕ್ಷಾಂತರ ಜನರ ತ್ಯಾಗ ಬಲಿದಾನದಿಂದ ಸ್ಥಾಪಿತವಾಗಿರುವ ಕಾಂಗ್ರೆಸ್ ಪಕ್ಷದಿಂದ ರಾಷ್ಟ್ರದ ಅಭಿವೃದ್ಧಿ ಸಾಧ್ಯವಿದೆ. ಜನತೆಯಲ್ಲಿ ಕಾಂಗ್ರೆಸ್ ಪರವಾದ ಅಭಿಪ್ರಾಯವು ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಮತ್ತೆ ರಾಜ್ಯ ಹಾಗೂ ದೇಶದಲ್ಲಿ ಅಧಿಕಾರಕ್ಕೆ ತರಲು ಪಕ್ಷದ ಸಂಘಟನೆಯಲ್ಲಿ ಕಾರ್ಯಕರ್ತರು ತಮ್ಮನ್ನು ತೊಡಗಿಸಿಕೊಳ್ಳಬೇಕು. ತಾಲ್ಲೂಕಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಸಾವಿರಾರು ಸದಸ್ಯರು ಸದಸ್ಯತ್ವ ಪಡೆಯಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜನಿವಾರ ಗ್ರಾಮ ಪಂಚಾಯಿತಿ ಸದಸ್ಯ ವಸಂತ, ತಾಲ್ಲೂಕು ಕಾಂಗ್ರೆಸ್ ಜಾಲತಾಣ ವಿಭಾಗದ ಅಧ್ಯಕ್ಷ ನಾಗೇಶ್ ಬಿಂಡೇನಹಳ್ಳಿ, ಯುವಕರು, ಜತ್ತೇನಹಳ್ಳಿ ಹಾಗೂ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು.