ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2018,2019,2020, 2021, 2022 ಹಾಗೂ2023 ನೇ ಸಾಲಿನ ʻಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿʼ ಯನ್ನು ಪ್ರಕಟಿಸಲಾಗಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.
ಕಳೆದ 6 ವರ್ಷಗಳಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡದೇ ಇರುವುದರಿಂದ ಈ ಬಾರಿ 6 ಜನ ಸಾಧಕರಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನೂ ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2018ನೇ ಸಾಲಿನ ʻಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿʼ ಪ್ರಶಸ್ತಿಗಾಗಿ ದಲಿತ ಸಾಹಿತ್ಯ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಾಡಿರುವ ಕೋಲಾರದ ಶ್ರೀ ಕೋಟಿಗಾನಹಳ್ಳಿ ರಾಮಯ್ಯ, 2019ನೇ ಸಾಲಿನ ಪ್ರಶಸ್ತಿಗೆ ಕಲಬುರಗಿಯ ಡಾ. ಎಚ್. ಟಿ. ಪೋತೆ, 2020 ನೇ ಸಾಲಿನ ಪ್ರಶಸ್ತಿಗಾಗಿ ವಿಜಯಪುರದ ಶ್ರೀಮತಿ ಇಂದುಮತಿ ಲಮಾಣಿ, ೨೦೨೧ನೇ ಸಾಲಿನ ಪ್ರಶಸ್ತಿಗಾಗಿ ಬೆಂಗಳೂರಿನ ಡಾ. ಕಾ.ವೆಂ. ಶ್ರೀನಿವಾಸಮೂರ್ತಿ, 2022ನೇ ಸಾಲಿನ ಪ್ರಶಸ್ತಿಗಾಗಿ ಗದಗದ ಡಾ. ಅರ್ಜುನ ಗೊಳಸಂಗಿ ಹಾಗೂ 2023ನೇ ಸಾಲಿನ ಪ್ರಶಸ್ತಿಯನ್ನು ಹಾಸನದ ಶ್ರೀ ನಾಗರಾಜ ಹೆತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ ನಡೆದ 81ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ನೆನಪಿಗಾಗಿ ಆ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಸಿದ್ದಲಿಂಗಯ್ಯ ಅವರ ಹೆಸರಿನಲ್ಲಿ ʻಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ನಿಧಿಯನ್ನು ಸ್ಥಾಪಿಸಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ನೀಡಬೇಕು ಎನ್ನುವುದು ದತ್ತಿಯ ಮೂಲ ಆಶಯವಾಗಿದೆ. ಪ್ರಸ್ತುತ ʻಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿʼಗೆ ಆಯ್ಕೆಯಾಯಾಗಿರುವ ಎಲ್ಲಾ ಸಾಹಿತ್ಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸಿ ಅವರ ಸಾಹಿತ್ಯ ಸೇವೆ ನಿರಂತರವಾಗಿರಲಿ ಎಂದು ಆಶಿಸುತ್ತದೆ. ಕನ್ನಡ ನಾಡಿನಲ್ಲಿ ದಲಿತ ಸಾಹಿತ್ಯ ಕ್ಷೇತ್ರಗಳಲ್ಲಿ ಅಪರಿಮಿತ ಸಾಧನೆ ಮಾಡಿರುವ ಗಣ್ಯರನ್ನು ಸೂಕ್ಷ್ಮವಾಗಿ ಗುರುತಿಸಿ ಪರಿಷತ್ತು ಸ್ಥಾಪಿಸಿರುವ ಈ ದತ್ತಿ ಆಶಯಕ್ಕೆ ಯಾವುದೇ ಚ್ಯುತಿಯಾಗದ ರೀತಿಯಲ್ಲಿ ಆಯ್ಕೆ ಸಮಿತಿ ಆಯ್ಕೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ. ಡಾ. ಮಹೇಶ ಜೋಶಿ ಅವರು ಹೇಳಿದ್ದಾರೆ. ಕೊರೋನಾ ಸೇರಿದಂತೆ ಇತರ ಕಾರಣಗಳ ಹಿನ್ನೆಲೆಯಲ್ಲಿ ಕಳೆದ 6ವರ್ಷಗಳಿಂದ ʻಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿʼ ಪ್ರಶಸ್ತಿಯ ಪ್ರಕಟಣೆ ಬಾಕಿ ಇತ್ತು. ಪ್ರಸ್ತುತ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷರ ಅವಧಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ವರ್ಷಗಳ ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಪ್ರಶಸ್ತಿಯು 10,000(ಹತ್ತು ಸಾವಿರ)ರೂ. ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನೂ ಒಳಗೊಂಡಿರುತ್ತದೆ. ಇದುವರೆಗೆ ಇಬ್ಬರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಶ್ರೀಮತಿ ರಮಾಕುಮಾರಿ, ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು, ಶ್ರೀ ನೇ.ಭ.ರಾಮಲಿಂಗ ಶೆಟ್ಟಿ ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.