ಹಾಸನ: ಹಾಸನ ಜಿಲ್ಲೆಯಲ್ಲಿ ಕಳೆದ 10 ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಹೊಂದಿರುವ ಎಂ ಎಸ್ ಅರ್ಚನಾ ಅವರು ಇಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ ಅವರಿಗೆ ಪ್ರಭಾರ ಹಸ್ತಾಂತರಿಸಿದರು.
ಇದೇ ವೇಳೆ ನಿರ್ಗಮಿತ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ಕಂದಾಯ ಇಲಾಖೆ ,ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಸ್ ಅರ್ಚನಾ ಅವರು ಕಳೆದ 10 ತಿಂಗಳ ಸೇವಾ ಅವಧಿಯಲ್ಲಿನ ಕೆಲಸ ತೃಪ್ತಿ ನೀಡಿದೆ. ವಿಧಾನ ಸಭೆ ಚುನಾವಣೆ ಯಶಸ್ವಿ ನಿರ್ವಹಣೆ ಸೇರಿದಂತೆ ಎಲ್ಲಾ ಕಾರ್ಯದಲ್ಲೂ ಸಹಕಾರ ನೀಡಿದ ಅಧಿಕಾರಿ ಸಿಬ್ಬಂದಿ,ಜಿಲ್ಲೆಯ ಜನಪ್ರತಿನಿಧಿಗಳಿಗೆ ಸಂಘ ಸಂಸ್ಥೆಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು.
ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ, ಪ್ರಭಾರಿ ಅಪರ ಜಿಲ್ಲಾಧಿಕಾರಿಯಾಗಿರುವ ಉಪ ವಿಭಾಗಾಧಿಕಾರಿ ಮಾರುತಿ ಮತ್ತಿತರರು ಮಾತನಾಡಿ ಎಂ.ಎಸ್ ಅರ್ಚನಾ ಅವರಿಗೆ ಶುಭ ಹಾರೈಸಿದರು.
ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಸಿಬ್ಬಂದಿ ಹಾಗೂ ಇತರ ಇಲಾಖೆ ಅಧಿಕಾರಿ ಸಿಬ್ಬಂದಿ ಭಾವುಕರಾಗಿ ಬೀಳ್ಕೋಡುಗೆ ನೀಡಿದರು.
Tags
ಹಾಸನ