ಹಾಸನ ಜುಲೈ 12(ಕರ್ನಾಟಕ ವಾರ್ತೆ):- ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ, ಆಹಾರಧಾನ್ಯದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 05 ಕೆ.ಜಿ. ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ. ಆಹಾರಧಾನ್ಯವನ್ನು ಉಚಿತವಾಗಿ ವಿತರಿಸಲು ಸರ್ಕಾರವು ನಿರ್ಧರಿಸಿದೆ.
ಈ ಉದ್ದೇಶಕ್ಕಾಗಿ ಅಗತ್ಯವಿರುವ ಆಹಾರಧಾನ್ಯವನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸುವವರೆಗೆ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 05 ಕೆ.ಜಿ, ಆಹಾರಧಾನ್ಯದ ಬದಲಾಗಿ ಪ್ರತಿ ಕೆ.ಜಿ.ಗೆ ರೂ.34/-ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಆಃಖಿ ಮೂಲಕ ಹಣವನ್ನು ವರ್ಗಾಯಿಸಲು ಆದೇಶಿಸಲಾಗಿದೆ.
ಅರ್ಹ ಆದ್ಯತಾ ಮತ್ತು ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳನ ಫಲಾನುಭವಿಗಳಿಗೆ ನೀಡಲಾಗುವ ನಗದು ಮೊತ್ತವನ್ನು ಸದರಿ ಪಡಿತರ ಚೀಟಿ ಕುಟುಂಬಗಳ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನಗದು ವರ್ಗಾವಣೆಗೆ ಮಾಡುವುದರಿಂದ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಗೆ ಆಧಾರ್ ಲಿಂಕ್, ಇ-ಕೆವೈಸಿ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಕುಟುಂಬದ ಮುಖ್ಯಸ್ಥರಿಲ್ಲದಿದ್ದಲ್ಲಿ ಅಥವಾ ಇಬ್ಬರು ಕುಟುಂಬದ ಮುಖ್ಯಸ್ಥರಿದ್ದಲ್ಲಿ ಅಂತಹ ಪಡಿತರ ಚೀಟಿಗಳಲ್ಲಿ ಒಬ್ಬರನ್ನು ಕುಟುಂಬದ ಮುಖ್ಯಸ್ಥರನ್ನಾಗಿ ನೇಮಿಸಿಕೊಂಡು (ಹಿರಿಯ ಮಹಿಳೆಗೆ ಪ್ರಥಮ ಆದ್ಯತೆ) ಇ-ಕೆವೈಸಿ ಮಾಡಿಸಿಕೊಳ್ಳಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

