ಹಾಸನ : ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾಗಿರುವ ಪೂರ್ಣ ಪ್ರಮಾಣದಲ್ಲಿ, ಮಧ್ಯಮ, ಭಾಗಶಃ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೆನ್ನೆ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಳೆಯಿಂದ ಹಾನಿಯಾಗಿರುವ ರಸ್ತೆಗಳು ಕಟ್ಟಡಗಳ ದುರಸ್ತಿಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಎನ್.ಡಿ.ಆರ್. ಮಾರ್ಗಸೂಚಿಯಂತೆ ದುರಸ್ತಿಗೆ ಮಾತ್ರ ಅವಕಾಶವಿದೆ ಹೊಸದಾಗಿ ಕಾಮಗಾರಿ ಮಾಡಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದ ಅವರು ಆರು ತಿಂಗಳ ಒಳಗೆ ಬಿಲ್ ಸಲ್ಲಿಕೆ ಮಾಡಿದಲ್ಲಿ ಮಾತ್ರ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಅಧಿಕ ಮಳೆಯಿಂದಾಗುವ ಭೂಕುಸಿತ ಬಗ್ಗೆ ಕೂಡ ಎಚ್ಚರ ವಹಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ಅವರು ಮಾತನಾಡಿ ತಹಶೀಲ್ದಾರ್ ಮತ್ತು ಕಾರ್ಯನಿರ್ವಹಣಾ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಜಂಟಿಯಾಗಿ ಸಭೆ ನಡೆಸುವಂತೆ ಸೂಚಿಸಿದರಲ್ಲದೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
