ಹಾಸನ:- ಆಲೂರು ತಾಲ್ಲೂಕಿನ ಗಂಜಿಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಸಿ ಸತ್ಯಭಾಮ ಅವರು ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳಿಗೆ ಸರಳವಾದ ಲೆಕ್ಕಗಳನ್ನು ಮಾಡಲು ತಿಳಿಸಿದಾಗ ಮಕ್ಕಳು ತಡವರಿಸಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿಯವರು ಮಕ್ಕಳ ಕಲಿಕೆಗೆ ಇನ್ನೂ ಹೆಚ್ಚಿನ ಗಮನಹರಿಸಲು ಶಿಕ್ಷಕರಿಗೆ ಸೂಚನೆ ನೀಡಿದರು.
ಶಾಲಾ ಆಟದ ಮೈದಾನವನ್ನು ಬಳಸಿಕೊಂಡು ಮಕ್ಕಳು ಪಠ್ಯದ ಜೊತೆಗೆ ಕ್ರೀಡೆಗಳಲ್ಲೂ ತೊಡಗಿಕೊಳ್ಳುವಂತೆ ಕ್ರಮವಹಿಸುವಂತೆ ಶಿಕ್ಷಕರಿಗೆ ನಿರ್ದೇಶನ ನೀಡಿದರು. ಸದರಿ ಶಾಲೆಯಲ್ಲಿ ಮಕ್ಕಳಿಗೆ ಅಡಿಗೆ ಮಾಡುವವರು ಇಲ್ಲದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಅಡುಗೆಯವರನ್ನು ನೇಮಿಸಲು ಸೂಚನೆ ನೀಡಿದ್ದಾರೆ.
ಶಾಲಾ ಕಾಂಪೌAಡ್ ಕಾಮಗಾರಿ ಅರ್ಧಕ್ಕೆ ನಿಂತಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸದರಿ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮವಹಿಸುವಂತೆ ಸೂಚಿಸಿದರು.
ನಂತರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು ಸ್ಥಳದಲ್ಲಿ ವೈದ್ಯರು ಹಾಗೂ ನರ್ಸ್ ಇಲ್ಲದಿದ್ದ ಕಾರಣ ಈ ಬಗ್ಗೆ ಕ್ರಮಕೈಗೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿದ್ದಾರೆ.
ನಂತರ ತವರಿನ ಸಂಧ್ಯಾ ದೀಪ ವೃದ್ಧಾಶ್ರಮಕ್ಕೆ ಭೇಟಿ ನೀಡಿ ವೃದ್ಧರ ಕುಶಲೋಪರಿ ವಿಚಾರಿಸಿದರು. ನಂತರ ಸ್ಥಳೀಯ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು. ಈ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಮುದಾಯ ಶೌಚಾಲಯ ನಿರ್ಮಾಣಕ್ಕೆ ಕ್ರಮವಹಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದ್ದಾರೆ.