ಹಾಸನ: ಹಿಂದುಳಿದ ವರ್ಗಗಳ ನಿಗಮಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ನೀಡುತ್ತಿಲ್ಲ, ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಒಬಿಸಿ ಜಿಲ್ಲಾಧ್ಯಕ್ಷ ಜಯಣ್ಣ, ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಹಿಂದುಳಿದ ವರ್ಗಗಳ ಸಮುದಾಯಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ. ಹಿಂದುಳಿದ ವರ್ಗಗಳ ಸಮುದಾಯಗಳ ಹಲವು ನಿಗಮಗಳಿಗೆ ಈ ವರೆಗೂ ಅನುದಾನ ಬಿಡುಗಡೆ ಮಾಡದೆ ಸಮುದಾಯಗಳ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ ಎಂದು ಆರೋಪಿಸಿದರು.
ಅನುದಾನ ನೀಡದ ಕಾರಣ, ಹಿಂದುಳಿದ ವರ್ಗಗಳ ಜನರ ಆರ್ಥಿಕ, ಕೃಷಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹಿನ್ನಡೆಯಾಗುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ಒಂದು ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಿತ್ತು. ಆದರೆ ಈ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನ ಶೂನ್ಯವಾಗಿದೆ ಎಂದು ದೂರಿದರು.
ಇದೇ ರೀತಿ ಡಿ.ದೇವರಾಜ ಅರಸು, ಒಕ್ಕಲಿಗ, ವಿಶ್ವಕರ್ಮ, ವೀರಶೈವ ಲಿಂಗಾಯತ, ನಿಜ ಶರಣ ಅಂಬಿಗರ ಚೌಡಯ್ಯ, ಸವಿತಾ ಸಮಾಜ, ಅಲೆಮಾರಿ ಹಾಗೂ ಅರೆ ಅಲೆಮಾರಿ, ಮಡಿವಾಳ ಮಾಚಿದೇವ ಮತ್ತು ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಈ ವರೆಗೂ ಹಣ ಬಿಡುಗಡೆ ಮಾಡಿಲ್ಲ.
ಈ ಹಿಂದೆ ೧೯,೬೦೦ ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿ, ಅದರಲ್ಲಿ ಕೇವಲ ೫೭ ಕೋಟಿ ರೂ.ಗಳನ್ನು ಮಾತ್ರ ವೆಚ್ಚ ಮಾಡಿ ಮೋಸ ಮಾಡಿದೆ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಲಕ್ಕಾಗಿ ೬೦೬೫ ಅರ್ಜಿ ಸಲ್ಲಿಕೆಯಾದರೂ ಒಂದು ಪೈಸೆ ಹಣವನ್ನೂ ಬಿಡುಗಡೆ ಮಾಡದೇ ಇರುವುದು ಹಿಂದುಳಿದ ವರ್ಗಗಳ ಮಕ್ಕಳಿಗೆ ಮಾಡಿರುವ ಮೋಸ ಎಂದು ಅಸಮಾಧಾನ ಹೊರ ಹಾಕಿದರು.
ಅತ್ಯಂತ ಹಿಂದುಳಿದ ಸಮುದಾಯಗಳಾದ ಹೂಗಾರ, ಕಂಬಾರ, ಗಾಣಿಗ, ಈಡಿಗ ಮತ್ತು ಮಾಳಿ ಸಮುದಾಯಗಳು ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಖ್ಯ ವಾಹಿನಿಗೆ ಬರಬೇಕೆಂದು ಪ್ರತ್ಯೇಕ ಅಭಿವೃದ್ಧಿ ನಿಗಮಗಳನ್ನು ಬಿಜೆಪಿ ಸರ್ಕಾರ ಸ್ಥಾಪಿಸಿತು.
ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಈ ಯಾವುದೇ ನಿಗಮಗಳಿಗೂ ಹಣ ನೀಡದೆ ಅನ್ಯಾಯ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು
ಕೂಡಲೇ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಓಬಿಸಿ ರಾಜ್ಯ ಕಾರ್ಯದರ್ಶಿ ಪ್ರಸನ್ನ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು, ದೀಪಕ್ ಮೊದಲಾದವರಿದ್ದರು.